Follow Us On

WhatsApp Group
Focus News
Trending

ನಾಮಧಾರಿ ಸಭಾಭವನದಲ್ಲಿ ಆಯೋಜಿಸಿದ್ದ ನಾಮಧಾರಿ ಸಮಾಜದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕುಮಟಾ: ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡಬೇಕೆಂದು ಜಿಲ್ಲಾ ಆರ್ಯ ಈಡಿಗ ನಾಮಧಾರಿ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ನಾಯ್ಕ ಹೇಳಿದರು. ಕುಮಟಾ ತಾಲೂಕು ಆರ್ಯ ಈಡಿಗ ನಾಮಧಾರಿ ಸಂಘ, ನಾಮಧಾರಿ ಮಹಿಳಾ ಸಂಘ, ಯುವ ನಾಮಧಾರಿ ಸಂಘ, ನಾಮಧಾರಿ ನೌಕರರ ಸಂಘ ಮತ್ತು ಶ್ರೀರಾಮ ಸೇವಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ನಾಮಧಾರಿ ಸಭಾಭವನದಲ್ಲಿ ಆಯೋಜಿಸಿದ್ದ ನಾಮಧಾರಿ ಸಮಾಜದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಈ ಪ್ರತಿಭಾ ಪುರಸ್ಕಾರ ಪಡೆದವರಲ್ಲಿ ಹೆಣ್ಣುಮಕ್ಕಳೆ ಮೇಲಗೈ ಸಾಧಿಸಿದ್ದಾರೆ. ಪ್ರತಿಭಾವಂತ ಮಕ್ಕಳು ಸಮಾಜದ ಆಸ್ತಿಯಾಗಿದ್ದು, ಅವರನ್ನು ಪ್ರೋತ್ಸಾಹಿಸುವ ಮೂಲಕ ಸಾಧನೆಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಡಯಟ್ ಕಾಲೇಜ್‌ನ ಹಿರಿಯ ಉಪನ್ಯಾಸಕ ಜಿ ಎಸ್ ನಾಯ್ಕ ಮಾತನಾಡಿ, ನಮ್ಮಲ್ಲಿ ಎಷ್ಟೆ ಬುದ್ದಿ ಶಕ್ತಿ ಇದ್ದರೂ ಗುರು-ಹಿರಿಯರ ಮಾತನ್ನು ಕೇಳಬೇಕು. ಮಕ್ಕಳು ಪಾಲಕರ, ಹಿರಿಯರ ಮಾತನ್ನು ಗೌರವಿಸುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕಾರಣರಾಗಬೇಕು ಎಂದರು.

ವಕೀಲ ಜಯಂತ ನಾಯ್ಕ ಮಾತನಾಡಿ, ಶಿಕ್ಷಣ ಕೇವಲ ಅಂಕಗಳಿಗೆ ಸೀಮಿತವಾಗದೇ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ನಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಅವಕಾಶಗಳನ್ನು ನಾವೇ ಹುಡುಕಿಕೊಂಡು ಸಾಧನೆ ಪಥದಲ್ಲಿ ಸಾಗಬೇಕು ಎಂದರು. ಕುಮಟಾ ಬಿಆರ್‌ಸಿ ರೇಖಾ ಸಿ ನಾಯ್ಕ ಮಾತನಾಡಿ, ಕೋವಿಡ್ ಕಾರಣದಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್‌ನ್ನು ಮಿತವಾಗಿ ಬಳಸುವ ಜೊತೆಗೆ ಹೆಚ್ಚು ಅಧ್ಯಯನಶೀಲರಾಗುವ ಮೂಲಕ ಅತ್ಯುತ್ತಮ ಅಂಕಗಳನ್ನು ಪಡೆದು, ಪ್ರತಿಭಾವಂತರಾಗಿ ಹೊರಹೊಮ್ಮಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಮಟಾ ತಾಲೂಕು ಆರ್ಯ ಈಡಿಗ ನಾಮಧಾರಿ ಸಂಘದ ಅಧ್ಯಕ್ಷ ಸುಬ್ರಾಯ ಜಿ ನಾಯ್ಕ ಮಾತನಾಡಿ, ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಅನನ್ಯ ನಾಯ್ಕ ಮತ್ತು ನಾಗಾಂಜಲಿ ನಾಯ್ಕ ಜೊತೆಗೆ ಶೇ.90ಕ್ಕೂ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಕರ್ನಾಟಕ ರಾಜ್ಯ ನಾಮಧಾರಿ ಯುವ ವೇದಿಕೆ ಬೆಂಗಳೂರು ವತಿಯಿಂದ ನೀಡಲಾದ ಆರ್ಥಿಕ ನೆರವನ್ನು ವೇದಿಕೆಯ ಪ್ರಮುಖರಾದ ವಿನಾಯಕ ನಾಯ್ಕ ಕರ್ಕಿ ಅವರು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿತರಿಸಿದರು.

ಗ್ಲೋಬಲ್ ನಾಮಧಾರಿ ಸಂಘದ ಅಧ್ಯಕ್ಷ ರಾಮಚಂದ್ರ ನಾಯ್ಕ ಯಲ್ಲಾಪುರ , ಕುಮಟಾ ತಾಲೂಕು ಆರ್ಯ ಈಡಿಗ ನಾಮಧಾರಿ ಸಂಘದ ಉಪಾಧ್ಯಕ್ಷ ಸಂತೋಷ ನಾಯ್ಕ ವೇದಿಕೆಯಲ್ಲಿದ್ದರು. ಕುಮಾರ ಎಸ್ ನಾಯ್ಕ ಸ್ವಾಗತಿಸಿದರು. ಶಿಕ್ಷಕ ಮಂಜುನಾಥ ನಾಯ್ಕ ನಿರ್ವಹಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಕುಮಟಾ ತಾಲೂಕು ಆರ್ಯ ಈಡಿಗ ನಾಮಧಾರಿ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಸಮಾಜದ ಬಾಂಧವರು ಉಪಸ್ಥಿತರಿದ್ದರು.

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button