ಜುಲೈ 13 ರಂದು ಸಿಎಂ ಬಸವರಾಜ ಬೊಮ್ಮಾಯಿ ಉತ್ತರಕನ್ನಡ ಜಿಲ್ಲೆಗೆ ಭೇಟಿ: ಮಳೆ ಹಾನಿ ಪ್ರದೇಶಗಳ ಪರಿಶೀಲನೆ: ಎಲ್ಲೆಲ್ಲಿ ಭೇಟಿ ?
ಕಾರವಾರ: ಜುಲೈ 13 ರಂದು ಸಿಎಂ ಬಸವರಾಜ ಬೊಮ್ಮಾಯಿ ಉತ್ತರಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ ಅಂತಾ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು. ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಮಳೆ ಹಾನಿ ಕುರಿತು ಸಂಸದ ಅನಂತಕುಮಾರ ಹೆಗಡೆ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಹಿತಿ ನೀಡಿದರು.
ಉತ್ತರಕನ್ನಡ ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಹಲವೆಡೆ ಭೂಕುಸಿತ, ಕಡಲಕೊರೆತ ಸೇರಿದಂತೆ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ. ಉಡುಪಿ ಪ್ರವಾಸದ ಬಳಿಕ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದು ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆಯನ್ನ ಸಹ ನಡೆಸಿ ಹಾನಿ ಕುರಿತು ಚರ್ಚೆ ನಡೆಸಲಿದ್ದಾರೆ.
ಇನ್ನು ಕಳೆದ ಬಾರಿ ನೆರೆ ಹಾನಿ ಉಂಟಾಗಿದ್ದ ಸಂದರ್ಭದಲ್ಲಿ ಸಿಎಂ ಆಗಿ ಅಧಿಕಾರವಹಿಸಿಕೊಂಡ ಮರುದಿನವೇ ಜಿಲ್ಲೆಗೆ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಹಾನಿ ಕುರಿತು ಪರಿಶೀಲನೆ ನಡೆಸಿದ್ದರು. ಈ ವೇಳೆ ಹಾನಿಗೆ ರಾಜ್ಯದಲ್ಲೇ ಅತೀ ಹೆಚ್ಚು 210 ಕೋಟಿ ರೂಪಾಯಿ ಪರಿಹಾರವನ್ನ ಜಿಲ್ಲೆಗೆ ಬಿಡುಗಡೆ ಮಾಡಿದ್ದರು. ಇದರಿಂದ ನೆರೆಹಾನಿಯ ಸಾಕಷ್ಟು ಸಮಸ್ಯೆಗಳು ಪರಿಹಾರಗೊಂಡಿದ್ದವು. ಇದೀಗ ಮತ್ತೊಮ್ಮೆ ಜಿಲ್ಲೆಗೆ ಮುಖ್ಯಮಂತ್ರಿಗಳು ಭೇಟಿ ನೀಡುತ್ತಿರುವುದು ಮತ್ತಷ್ಟು ಅನುಕೂಲವಾಗುವ ನಿರೀಕ್ಷೆಯಿದೆ ಅಂತಾ ಸಚಿವ ಕೋಟ ಶ್ರೀನಿವಾಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಸ್ಮಯ ನ್ಯೂಸ್ ಕಾರವಾರ