ಮನೆ&ದೇವಸ್ಥಾನದಲ್ಲಿ ಮಾತ್ರ ಪ್ರತಿಷ್ಠಾಪನೆಗೆ ಅವಕಾಶ
ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಮೆರವಣಿಗೆಗೆ ಇಲ್ಲ ಅವಕಾಶ
ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು
ಕಾರವಾರ: ಗಣೇಶೋತ್ಸವ ಸಂಭ್ರಮವನ್ನು ಕರೊನಾ ಕಸಿದುಕೊಂಡಿದೆ. ಹೌದು, ಕರೊನಾ ಹಿನ್ನೆಲೆಯಲ್ಲಿ ಈ ಬಾರಿ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವಂತಿಲ್ಲ. ಗಣೇಶಮೂರ್ತಿಗಳನ್ನು ಸಾರ್ವಜನಿಕ ಸ್ಥಳದಲ್ಲಿ ಪ್ರತಿಷ್ಠಾಪನೆ, ವಿಸರ್ಜನೆ ಹಾಗೂ ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ.
ಕರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದನ್ವಯ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಅವರು ಮಾಹಿತಿ ನೀಡಿದ್ದಾರೆ. ಗಣೇಶ ಚತುರ್ಥಿ ಹಬ್ಬವನ್ನು ಗುಂಪಾಗಿ ಸೇರದೇ ಭಕ್ತಿಪೂರ್ವಕವಾಗಿ ಆಚರಿಸುವಂತೆ ಜನರಲ್ಲಿ ಜಾಗೃತೆ ಮೂಡಿಸಬೇಕೆಂದು ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.
ಇದೇ ವೇಳೆ, ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ, ಮನೆಯಲ್ಲೇ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕಿದೆ. ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು ಅಲ್ಲದೇ ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆಗಳು ಹೊರಡಿಸಲಾದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸೂಚಿಸಿದ್ದಾರೆ.
ಮಾರ್ಗಸೂಚಿಯಲ್ಲೇನಿದೆ?
ಗಣೇಶ ಮೂರ್ತಿಯನ್ನು ಗಲ್ಲಿ, ರಸ್ತೆ, ಓಣಿ ಮುಂತಾದ ಭಾಗದಲ್ಲಿ ಪ್ರತಿಷ್ಠಾಪಿಸಬಾರದು.
ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ.
ಮನೆಯಲ್ಲಿ ಸ್ಥಾಪಿಸಿದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು.
ಗಣೇಶ ಹಬ್ಬ ಆಚರಿಸುವ ದೇವಸ್ಥಾನದಲ್ಲಿ ಪ್ರತಿದಿನ ಸ್ಯಾನಿಟೈಝೇಷನ್ ಕಡ್ಡಾಯ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್