ರಾಜ್ಯದಲ್ಲಿ ನವೆಂಬರ್ 7ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿರುವ ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು ಮತ್ತು ದಾವಣಗೆರೆ, ರಾಮನಗರ ಮತ್ತು ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಲಾಗಿದೆ.
ಬ್ಯುರೋ ರಿಪೋರ್ಟ್, ವಿಸ್ಮಯ ನ್ಯೂಸ್