ಅನಂತ್ ಕುಮಾರ್ ಹೆಗಡೆಗೆ ತಪ್ಪಿದ ಟಿಕೆಟ್: ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊoಡ ಹಾಲಿ ಸಂಸದರು

ಕಾರವಾರ: ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಂತಿಮವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಂಸದ ಅನಂತಕುಮಾರ್ ಹೆಗಡೆ ಈ ಬಾರಿ ಭಾಜಪಾ ಟಿಕೆಟ್ ನಿರಾಕರಿಸಿದ್ದು, ಕೆನರಾ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಅಂತಿಮವಾಗಿ ಟಿಕೆಟ್ ಘೋಷಣೆ ಮಾಡಲಾಗಿದೆ. ಇದರೊಂದಿಗೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ನಡೆ ಈಗ ನಿಗೂಢವಾಗಿದೆ. ಅವರ ಬೆಂಬಲಿಗರು ಪಕ್ಷೇತರವಾಗಿ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ.

ಉತ್ತರ ಕನ್ನಡದಿಂದ ಸ್ಪರ್ಧೆಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಅನಂತಕುಮಾರ ಹೆಗಡೆ ಅವರು ಭಾವನಾತ್ಮಕವಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, 3 ದಶಕಗಳಿಂದ ಸೇವೆ ಸಲ್ಲಿಸಲು ಅವಕಾಶ ನೀಡಿದ ʼಜನತಾ ಜನಾರ್ದನʼರಿಗೆ ಧನ್ಯವಾದ ಸಲ್ಲಿಸಿದ್ದಾರೆ .ತಮ್ಮ ಫೇಸ್‌ಬುಕ್ ಪುಟದಲ್ಲಿ ಈ ಕುರಿತು ಹೆಗಡೆ ಅವರು ಭಾವನಾತ್ಮಕ ಪೋಸ್ಟ್ ಹಂಚಿಕೊoಡಿದ್ದು, ತಮ್ಮ ಭಾಷಣದ ಶೈಲಿಯ ಪದಪ್ರಯೋಗದಲ್ಲೇ ಸಾರ್ವಜನಿಕರಿಗೆ ಪತ್ರ ಬರೆದಿದ್ದಾರೆ.

ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು. ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿoದಾಚೆ ಜೀವನವನ್ನು ನಿತ್ಯ ಸತ್ಯವನ್ನಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವನ್ನಾಗಿಸುವ, ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು. ಆದರೆ, ಆರಂಭ ಎಲ್ಲಿಂದ ಎಂದು ತಿಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ” ಎಂದು ಹೆಗಡೆ ಬರೆದುಕೊಂಡಿದ್ದಾರೆ.

“ಕಳೆದ 3 ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಂಯೋಗ ಈ ಬದುಕಿನಲ್ಲಿ ನನಗೊಂದು ಗುರುತು ನೀಡಿದೆ. ನಿಜಕ್ಕೂ ಅಷ್ಟೇ ಸಾಕು! ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೇ ಸಿಕ್ಕೀತು? ಹೆತ್ತ ತಾಯೊಡಲಿದೆ, ಬದುಕು ಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ, ಮಗದೊಮ್ಮೆ, ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯದಾಳದ ಕೃತಜ್ಞತೆಯೊಂದಿಗೆ” ಎಂದು ಅನಂತಕುಮಾರ ಹೆಗಡೆ ಬರೆದಿದ್ದಾರೆ.

1996ರಲ್ಲಿ ನಡೆದ 11ನೇ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡದಿಂದ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದ ಅನಂತ ಕುಮಾರ ಹೆಗಡೆ, ನಂತರ ಐದು ಬಾರಿ ಉತ್ತರ ಕನ್ನಡ ಕ್ಷೇತ್ರದ ಸಂಸದರಾಗಿ ಚುನಾಯಿತರಾಗಿದ್ದಾರೆ. 2016ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕ್ಯಾಬಿನೆಟ್‌ನಲ್ಲಿ ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವರಾಗಿದ್ದರು. ವಿವಾದಾತ್ಮಕ ಹಾಗೂ ತೀವ್ರ ರಾಷ್ಟ್ರೀಯವಾದಿ ಹೇಳಿಕೆಗಳಿಂದ ಅವರು ಖ್ಯಾತರಾಗಿದ್ದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Exit mobile version