ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಸಾಕಷ್ಟು ಅನಾಹುತ ಸೃಷ್ಟಿಸಿದೆ. ಇದೇ ವೇಳೆ ಹವಾಮಾನ ಇಲಾಖೆಯು ಆಗಸ್ಟ್ 6ರವರೆಗೆ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯ 7 ತಾಲೂಕುಗಳಲ್ಲಿ ಇಂದು ಶಾಲೆ, ಪಿಯು, ಡಿಪ್ಲೋಮಾ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದರೊಂದಿಗೆ ಕರಾವಳಿ ತಾಲೂಕುಗಳ ವಿದ್ಯಾರ್ಥಿಗಳಿಗೆ ಈ ಭಾರಿ 17 ದಿನ ಮಳೆ ಕಾರಣಕ್ಕೆ ರಜೆ ದೊರೆದಂತಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಅತಿಯಾದ ಮಳೆಯಿಂದಾಗಿ ಜಲಾಶಯಗಳು ತುಂಬಿ ತುಳುಕುತ್ತಿದ್ದು, ಭಾರೀ ಪ್ರಮಾಣದಲ್ಲಿ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದಾಗಿ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿ ಹೊಲ-ಗದ್ದೆಗಳು ಜಲಾವೃತಗೊಂಡಿವೆ. ಉತ್ತರ ಕನ್ನಡ, ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ತಡರಾತ್ರಿಯವರೆಗೆ ಮಳೆ ಸುರಿದ ಪರಿಣಾಮ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ತಾಲೂಕಿನ ಅರಗ, ಚೆಂಡಿಯಾ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು, ಪ್ರವಾಸಿಗರಿಗೆ ಪ್ರವಾಸಿ ಸ್ಥಳಗಳಿಗೆ ನಿರ್ಬಂದ ವಿಧಿಸಲಾಗಿದೆ.
ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್