Important
Trending

ಕುಮಟಾ ತಾಲೂಕಾ ಕ್ರೀಡಾಕೂಟ: ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ

ಕುಮಟಾ: ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಹಾಗೂ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮೂರೂರು ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಕುಮಟಾ ತಾಲೂಕಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಇಲಾಖಾ ಕ್ರಿಡಾಕೂಟ ಕುಮಟಾ ಮಣಕಿ ಮೈದಾನದಲ್ಲಿ ನಡೆಯಿತು. ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿಯವರು ಕ್ರೀಡಾ ದ್ವಜರೋಹಣವನ್ನು ನೆರವೇರಿಸಿದರು.

ಪಾರಿವಾಳ ಹಾರಿಬಿಡುವ ಮೂಲಕ ಕ್ರೀಡಾಕೂಟ

ನಂತರ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಶಾಂತಿಯ ಸಂಕೇತವಾದ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಕ್ರೀಡಾ ಕೂಟಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಈ ವೇಳೆ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಭೋಧಿಸಲಾಯಿತು. ನಂತರ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಸ್ವಾಗತ ನೃತ್ಯ ಹಾಗೂ ಹಾಲಕ್ಕಿ ಸುಗ್ಗಿ ಕುಣಿತ ನೆರೆದವರ ಮನಸೂರೆಗೊಂಡಿತು. ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಮಾತನಾಡಿ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಸಹ ನಿರಂತರವಾಗಿ ಇರಬೇಕು ಎಂಬ ದೃಷ್ಟಿಯಿಂದ ಈ ಕ್ರೀಡಾಕೂಟ ಆಯೋಜನೆ ಮಾಡಿದ್ದಾರೆ.

ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಕ್ರೀಡೆಯು ಸಹಕಾರಿಯಾಗಿದೆ. ಶಿಕ್ಷಣದ ಜೊತೆಗೆ ಆರೋಗ್ಯವು ಮುಖ್ಯ ಎನ್ನುವ ದೃಷ್ಟಿಯಿಂದ ಎಲ್ಲಾ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಎಂಬ ತರಗತಿಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆಯಿಂದ ಕ್ರೀಡೆಯಲ್ಲಿ ಭಾಗವಹಿಸಿ ನಿರ್ಣಾಯಕರ ತೀರ್ಮಾನಕ್ಕೆ ಗೌರವವನ್ನು ನೀಡಬೇಕು ಎಂದರು.

ನಮ್ಮ ಕ್ರೀಡಾಪಟುಗಳು ನಮ್ಮ ಹೆಮ್ಮೆ

ವಿದ್ಯಾನಿಕೇತನ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಆರ್.ಜಿ. ಭಟ್ ಮಾತನಾಡಿ ನಮ್ಮ ಪ್ರಗತಿ ವಿದ್ಯಾಲಯವು ಗ್ರಾಮೀಣ ಭಾಗದ ಪ್ರೌಢ ಶಾಲೆಯಾಗಿದ್ದರೂ ಸಹ ನಮ್ಮ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ದೈಹಿಕವಾಗಿ ನಾವು ಸಮರ್ಥರಾಗಿದ್ದರೆ ನಮ್ಮ ಬೇರೆ ಎಲ್ಲಾ ಕಾರ್ಯಗಳನ್ನು ಮಾಡಬಹುದು. ಇಂದಿನ ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಮ್ಮ ತಾಲೂಕಿನ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಸಾಧನೆ ಮಾಡಿ ತಾಲೂಕಿನ ಕೀರ್ತಿಯನ್ನು ಬೆಳಗುವಂತಾಗಲಿ ಎಂದು ಶುಭ ಹಾರೈಸಿದರು.

ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಈ ಸಂದರ್ಭದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಶಿಕ್ಷಕರನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. 2025 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷಾ ವಿಷಯದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉದಯ ನಾಯ್ಕ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ರಾಜೇಂದ್ರ ಭಟ್, ಪುರಸಭಾ ಅಧ್ಯಕ್ಷೆ ಸುಮತಿ ಭಟ್, ಮೂರೂರು ಗ್ರಾಮಪಂಚಾಯತ್ ಅಧ್ಯಕ್ಷೆ ಭಾರತಿ ನಾಯ್ಕ, ಪ್ರಗತಿ ಪಿಯು ಕಾಲೇಜಿನ ಪ್ರಾಚಾರ್ಯರಾದ ಜಿ. ಎಮ್. ಭಟ್, ಶಿಕ್ಷಕರ ಸಂಘದ ಅಧ್ಯಕ್ಷ ರವೀಂದ್ರ ಭಟ್ ಸೂರಿ ಸೇರಿದಂತೆ ವಿವಿಧ ಶಾಲೆಗಳಿಂದ ಆಗಮಿಸಿದ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ

Back to top button