
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ. ಭೂಕುಸಿತ ಪ್ರದೇಶಗಳ ಮೇಲ್ವಿಚಾರಣೆಯಿಂದ ಹಿಡಿದು ಕಾಳಜಿ ಕೇಂದ್ರಗಳ ಸಿದ್ಧತೆವರೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಳೆಗಾಲದ ವೇಳೆ ಸಂಭವಿಸಬಹುದಾದ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಜಿಲ್ಲೆಯಾದ್ಯಂತ 294 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಪ್ರತಿಯೊಂದು ಕೇಂದ್ರಕ್ಕೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ 439 ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಪ್ರದೇಶಗಳ ನಿರಂತರ ಮೇಲ್ವಿಚಾರಣೆಗಾಗಿ ವೀಕ್ಷಣೆದಾರರನ್ನು ನಿಯೋಜಿಸಲಾಗಿದೆ. ಅವರಿಗೆ ವಿಶೇಷ ತರಬೇತಿ ನೀಡುವ ಪ್ರಕ್ರಿಯೆಯೂ ನಡೆಯುತ್ತಿದೆ. ಇದೇ ವೇಳೆ ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಪಂಚಾಯತ್ ವ್ಯಾಪ್ತಿಯ ಚರಂಡಿಗಳಲ್ಲಿ ಹೂಳೆತ್ತುವಿಕೆ ಮತ್ತು ಸ್ವಚ್ಛತಾ ಕಾರ್ಯದ ಮೊದಲ ಹಂತ ಪೂರ್ಣಗೊಂಡಿದ್ದು, ಅಗತ್ಯವಿದ್ದಲ್ಲಿ ಮುಂದಿನ ಹಂತದ ಕಾರ್ಯ ಕೈಗೊಳ್ಳುವಂತೆ ಸಂಬoಧಿತ ಇಲಾಖೆಗಳಿಗೆ ಸೂಚಿಸಲಾಗಿದೆ.
ಸರ್ಕಾರಿ ಶಾಲೆಗಳು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ವಿದ್ಯಾರ್ಥಿ ನಿಲಯಗಳು ಹಾಗೂ ಇತರೆ ಸರ್ಕಾರಿ ಕಟ್ಟಡಗಳ ಸುರಕ್ಷತೆ ಖಚಿತಪಡಿಸಿಕೊಳ್ಳುವಂತೆ ಸಂಬoಧಿತ ಇಲಾಖೆಗಳಿಗೆ ಜಿಲ್ಲಾಡಳಿತ ನಿರ್ದೇಶನ ನೀಡಿದೆ. ಮಳೆಗಾಲದಲ್ಲಿ ವಿದ್ಯುತ್ ಮತ್ತು ಸಂಪರ್ಕ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದoತೆ ಹೆಸ್ಕಾಂ ಹಾಗೂ ಬಿಎಸ್‌ಎನ್‌ಎಲ್ ಇಲಾಖೆಗಳು ಅಗತ್ಯ ಸಾಮಗ್ರಿಗಳನ್ನು ಸಂಗ್ರಹಿಸಿಕೊoಡಿದ್ದು, ತುರ್ತು ಸಂದರ್ಭಗಳಿಗೆ ಬದಲಿ ವ್ಯವಸ್ಥೆಗಳೊಂದಿಗೆ ಸಿದ್ಧವಾಗಿವೆ.
ಮಳೆಗಾಲದ ಸಂದರ್ಭದಲ್ಲಿ ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆಗಳು ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವ ಮೂಲಕ ಸುರಕ್ಷತೆ ಕಾಪಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರವು 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಸಾರ್ವಜನಿಕರು ತಮ್ಮ ತಾಲೂಕು ಅಥವಾ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.
ಬ್ಯೂರೋ ರಿಪೋರ್ಟ್ , ವಿಸ್ಮಯ ನ್ಯೂಸ್










