
ಕುಮಟಾ: ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾಗಿರುವ ಯಾಣಕ್ಕೆ ಮಳೆಗಾಲದ ಅವಧಿಯಲ್ಲಿ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿಕವಾಗಿ ನಿಷೇಧಿಸಿರುವ ಅರಣ್ಯ ಇಲಾಖೆಯ ಕ್ರಮಕ್ಕೆ ಯಾಣ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಳೆಗಾಲದಲ್ಲಿ ಸಂಭವಿಸಬಹುದಾದ ಭೂಕುಸಿತ, ರಸ್ತೆ ಹಾನಿ ಹಾಗೂ ಕಾಲು ಜಾರಿ ಅಪಘಾತಗಳಂತಹ ಅಪಾಯಗಳನ್ನು ಪರಿಗಣಿಸಿ, ಯಾಣಕ್ಕೆ ಪ್ರವಾಸಿಗರ ಭೇಟಿಯನ್ನು ಆಗಸ್ಟ್ 31ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಕೆ. ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಈ ಆದೇಶದ ಬೆನ್ನಲ್ಲೇ ಅರಣ್ಯ ಇಲಾಖೆ ಯಾಣ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಭಕ್ತರಲ್ಲಿ ಅಸಮಾಧಾನ ಮೂಡಿಸಿದೆ.
ಮಳೆಗಾಲದಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದರಲ್ಲಿ ಯಾವುದೇ ಅಭ್ಯಂತರವಿಲ್ಲ. ಆದರೆ, ಧಾರ್ಮಿಕ ಕ್ಷೇತ್ರಕ್ಕೆ ದೇವರ ದರ್ಶನಕ್ಕಾಗಿ ಆಗಮಿಸುವ ಭಕ್ತರ ಪ್ರವೇಶವನ್ನೂ ನಿರ್ಬಂಧ ಹೇರಿರುವುದು ಸಮಂಜಸವಲ್ಲ ಎಂದು ದೇವಸ್ಥಾನ ಆಡಳಿತ ಮಂಡಳಿ ಅಭಿಪ್ರಾಯಪಟ್ಟಿದೆ.
ದೇವರ ದರ್ಶನಕ್ಕೆ ಅವಕಾಶ ನೀಡಬೇಕು
ಯಾಣದ ಗುಹೆಗಳು ಹಾಗೂ ಅಪಾಯಕಾರಿ ಪ್ರದೇಶಗಳಿಗೆ ಪ್ರವೇಶವನ್ನು ನಿರ್ಬಂಧಿ ಸಿರುವುದು ಸೂಕ್ತ ಕ್ರಮವಾಗಿದ್ದರೂ, ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಯಾವುದೇ ಅಪಾಯಕಾರಿ ಸ್ಥಳಗಳಿಲ್ಲ. ಹೀಗಾಗಿ, ಭಕ್ತರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ ದರ್ಶನಕ್ಕೆ ಅವಕಾಶ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಕುರಿತು ಅರಣ್ಯ ಇಲಾಖೆ ಹಾಗೂ ಸಂಬ0ಧಿತ ಅಧಿಕಾರಿಗಳು ದೇವಸ್ಥಾನ ಆಡಳಿತದೊಂದಿಗೆ ಚರ್ಚೆ ನಡೆಸಿ, ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ಹಾಗೂ ಸುರಕ್ಷತೆಯನ್ನು ಖಾತ್ರಿಪಡಿಸುವ ರೀತಿಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂಬ ಆಗ್ರಹವೂ ವ್ಯಕ್ತವಾಗಿದೆ.
“ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಮಳೆಗಾಲದಲ್ಲಿ ಯಾಣದ ಗುಹೆಗಳಿಗೆ ತೆರಳುವುದನ್ನು ದೇವಸ್ಥಾನ ಆಡಳಿತವೇ ನಿಷೇಧಿಸುತ್ತದೆ. ಆದರೆ ದೇವರ ದರ್ಶನಕ್ಕಾಗಿ ಬರುವ ಭಕ್ತರಿಗೆ ದೇವಸ್ಥಾನ ಪ್ರವೇಶವನ್ನೇ ನಿರಾಕರಿಸುವುದು ಸರಿಯಲ್ಲ. ಈ ಕುರಿತು ಹಿರಿಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಯಾಣ ದೇವಸ್ಥಾನದ ಅಧ್ಯಕ್ಷ ರಾಮಚಂದ್ರ ಭಟ್ ತಿಳಿಸಿದ್ದಾರೆ.
ವಿಸ್ಮಯ ನ್ಯೂಸ್, ಕುಮಟಾ







