Important
Trending

ಮುಂದಿನ 48 ಗಂಟೆಗಳಲ್ಲಿ ಮಳೆ ಮತ್ತಷ್ಟು ತೀವ್ರ : ಹವಾಮಾನ ಇಲಾಖೆ ಮಾಹಿತಿ

ಕಾರವಾರ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ತನ್ನ ಅಬ್ಬರವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಮುಂದಿನ 48 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜೂನ್ 9 ಮತ್ತು 10 ರಂದು ಉತ್ತರ ಕನ್ನಡ ಸೇರಿದಂತೆ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಅತಿ ಭಾರೀ ಮಳೆಯೂ ದಾಖಲಾಗುವ ನಿರೀಕ್ಷೆಯಿದೆ. ಗುಡುಗು-ಮಿಂಚು ಸಹಿತ ಮಳೆಯೊಂದಿಗೆ ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಇದೀಗ ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕುಮಟಾ ತಾಲೂಕಿನಲ್ಲಿಯೂ ಮಳೆ ತನ್ನ ಅಬ್ಬರವನ್ನು ತೋರಿಸುತ್ತಿದೆ. ಪಟ್ಟಣದ ರಸ್ತೆಗಳಲ್ಲಿ ಜನರು ಕೊಡೆಗಳನ್ನು ಹಿಡಿದು ಓಡಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಾಲುವೆಗಳು ನೀರಿನಿಂದ ತುಂಬಿ ಹರಿಯುತ್ತಿದ್ದು, ಮಳೆಯ ತೀವ್ರತೆಯನ್ನು ಸೂಚಿಸುತ್ತಿವೆ. ಶಾಲೆ ಹಾಗೂ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಮಳೆಯ ನಡುವೆಯೇ ಕೊಡೆ ಹಿಡಿದು ಸಾಗುತ್ತಿರುವ ದೃಶ್ಯ ಎಲ್ಲೆಡೆ ಕಂಡುಬರುತ್ತಿದೆ.

ಮಳೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು, ನದಿ ತೀರಗಳು ಹಾಗೂ ಜಲಮೂಲಗಳ ಸುತ್ತಮುತ್ತ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಭಾರೀ ಮಳೆಯ ಪರಿಣಾಮ ಕೆಲವೆಡೆ ನೀರು ನಿಲ್ಲುವ ಸಾಧ್ಯತೆ ಇದ್ದು, ಸಾರ್ವಜನಿಕರು ಅನಗತ್ಯ ಸಂಚಾರವನ್ನು ಕಡಿಮೆ ಮಾಡುವಂತೆ ಸೂಚಿಸಲಾಗಿದೆ.

ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ

ಇನ್ನೊಂದೆಡೆ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮನೆಗಳಲ್ಲಿನ ವಿದ್ಯುತ್ ಸಂಪರ್ಕಗಳನ್ನು ಸುರಕ್ಷಿತವಾಗಿರಿಸಬೇಕು. ಮಳೆ ನೀರು ಮನೆಗಳಿಗೆ ಒಳನುಗ್ಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಬಿರುಗಾಳಿ ಸಂದರ್ಭದಲ್ಲಿ ಮರಗಳ ಕೆಳಗೆ, ವಿದ್ಯುತ್ ಕಂಬಗಳ ಬಳಿ ಅಥವಾ ಅಪಾಯದ ಸ್ಥಳಗಳಲ್ಲಿ ನಿಲ್ಲಬಾರದು ಎಂದು ಸೂಚಿಸಲಾಗಿದೆ.

ಗ್ರಾಮ ಪಂಚಾಯತ್, ತಾಲೂಕು ಆಡಳಿತ ಹಾಗೂ ಜಿಲ್ಲಾ ಆಡಳಿತದಿಂದ ನೀಡಲಾಗುವ ಅಧಿಕೃತ ಸೂಚನೆಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು. ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಇಲಾಖೆ, ಅಗ್ನಿಶಾಮಕ ದಳ ಹಾಗೂ ಸಂಬAಧಿತ ಅಧಿಕಾರಿಗಳ ನೆರವು ಪಡೆಯುವಂತೆ ಮನವಿ ಮಾಡಲಾಗಿದೆ.

ಬ್ಯುರೋ ರಿಪೋರ್ಟ್, ವಿಸ್ಮಯ ನ್ಯೂಸ್

Back to top button